ಬೆಂಗಳೂರು: ಕೊರೋನಾ ಸೋಂಕಿನ ಎರಡನೇ ಅಲೆ ಪ್ರಸರಣದ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಪರೀಕ್ಷೆ ನಡೆಸದಿರಲು ತಿರ್ಮಾನಿಸಿದ್ದು, ಮೌಲ್ಯಾಂಕನ ವಿಶ್ಲೇಷಣೆ ಅಡಿಯಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಒಂದರಿಂದ ಐದನೇ ತರಗತಿ ಮತ್ತು ಆರರಿಂದ ಒಂಭತ್ತನೇ ತರಗತಿಗಳವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, 1ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು, ಸಂವಹನದ ಆಧಾರದ ಮೇಲೆ ಮತ್ತು ಕೆಲವು ಶಾಲೆಗಳು ಆನ್‍ಲೈನ್ ಮೂಲಕ ತರಗತಿ ನಿರ್ವಹಿಸಿದ್ದಲ್ಲಿ ಆ ಸಂದರ್ಭದಲ್ಲಿ ಅವಲೋಕಿಸಿದ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಮಕ್ಕಳಿಗೆ ನೀಡಿದ್ದ ಪ್ರಬಂಧ, ಗೃಹ ಕೆಲಸ ಇತರೆ ಚಟುವಟಿಕೆಗಳನ್ನಾಧರಿಸಿ ಫಲಿತಾಂಶ ನೀಡಲು ನಿರ್ಧರಿಸಲಾಗಿದೆ.
ಮುಂದಿನ ತರಗತಿಗೆ ಬಡ್ತಿ ನೀಡುವುದು ಮತ್ತು ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ ಈ ಎಲ್ಲ ಪ್ರಕ್ರಿಯೆಗಳನ್ನು ಏಪ್ರಿಲ್ 30ರೊಳಗೆ ನಿರ್ವಹಿಸಿ ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ವರ್ಷಾರಂಭ
ಒಂದರಿಂದ ಏಳು – ಎಂಟನೇ ತರಗತಿಗಳು ಇರುವ ಪ್ರಾಥಮಿಕ ಶಾಲೆಗಳಿಗೆ ಮೇ 1ರಿಂದ ಜೂನ್ 14ರವರಗೆ ಬೇಸಿಗೆ ರಜೆ. ಜೂ. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ಮತ್ತು ಪ್ರೌಢಶಾಲೆಗಳಿಗೆ ಅಂದರೆ 8 ಮತ್ತು 9ನೇ ತರಗತಿಗಳಲ್ಲಿನ ವಿದ್ಯಾರ್ಥಿಗಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ, ಪ್ರೌಢಶಾಲೆಗಳ ಶಿಕ್ಷಕರಿಗೆ ಜೂ.15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ.
ಜೂ. 21ರಿಂದ ಜುಲೈ 5ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತವೆ. ಜು. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆ ಮತ್ತು ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.