ಬೆಂಗಳೂರು : ಸುಪ್ರೀಂಕೋರ್ಟ್ ಆದೇಶದ ಬಳಿಕವೂ ರಾಜ್ಯಕ್ಕೆ ಸಮರ್ಪಕ ಪ್ರಮಾಣದ ಆಕ್ಸಿಜನ್ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರ್ ಸ್ವಾಮಿ ಕಿಡಿ ಕಾರಿದ್ದಾರೆ. ಆಕ್ಸಿಜನ್ ನೀಡುವಲ್ಲಿ ವಿಚಾರದಲ್ಲಿ ಮತ್ತೆ ತಾರತಮ್ಯ ಮಾಡಲಾಗುತ್ತಿದ್ದು ಕನ್ನಡಿಗರೇನು ತಬ್ಬಲಿ ಮಕ್ಕಳೇ ಎಂದು ಪ್ರಶ್ನಿಸಿದ್ದಾರೆ.
ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಅವರು, ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್ ಹೇಳಿದೆ. ಈ ಆದೇಶದ ಬಳಿಕವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120MT ಮಾತ್ರ. ಆದರೆ ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಎಂದು ಹೆಚ್‌ಡಿಕೆ ಪ್ರಶ್ನಿಸಿದ್ದಾರೆ.
ಕರ್ನಾಟಕದ ವಿಚಾರದಲ್ಲಿ ಹೇಳತೀರದ ತಾರತಮ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಒಂದು ವಿಷಯ ಸ್ಪಷ್ಟವಾಗಿ ಅರಿಯಬೇಕು. ಇದು ಒಕ್ಕೂಟ ವ್ಯವಸ್ಥೆ, ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು
ಲಸಿಕೆ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 3ಕೋಟಿ ಲಸಿಕೆಗೆ ಕೇಳಿದ್ದೇವೆ 7 ಲಕ್ಷ ಡೋಸ್ ಸಿಕ್ಕಿದೆ, ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಆದ್ಯತೆ ಮೊದಲ ಡೋಸ್ ಪಡೆಯುವವರು ಕಾಯಬೇಕು ಎಂದಿದ್ದಾರೆ. ಲಸಿಕೆಯ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಪ್ರತಿಯೊಂದು ಧೋರಣೆಯನ್ನೂ ಬೆಂಬಲಿಸುವವರು, ಸಮರ್ಥಿಸಿಕೊಳ್ಳುತ್ತಿರುವವರು, ವಿರೋಧ ಪಕ್ಷಗಳ ನ್ಯಾಯಯುತ ಸಲಹೆ, ಬೇಡಿಕೆಗಳನ್ನು ಅಡಿಗಡಿಗೂ ಟೀಕಿಸುವವರು ಕರ್ನಾಟಕಕ್ಕೆ, ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯವನ್ನು ಸಮರ್ಥಿಸಿಕೊಳ್ಳುವರೇ? ಆಮ್ಲಜನಕವಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕನ್ನಡಿಗರ ಸಾವಿನ ಹೊಣೆಯನ್ನು ಹೊರುವರೇ?
We have so far tolerated injustice meted out to Karnataka regarding compensation and allocation. But let us not tolerate the injustice with respect to life.
— H D Kumaraswamy (@hd_kumaraswamy) May 13, 2021
ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು ಎಂದು ರಾಜ್ಯ ನಾಯಕರ ವಿರುದ್ಧ ಟ್ವಿಟರ್ ಮೂಲಕ ಹರಿಹಾಯ್ದಿದ್ದಾರೆ.
Oxygen is the need of the hour for Karnataka. If as Kannadigas we do not question the injustice being meted out to Karnataka in this regard, we cannot get justice with respect to other issues.
— H D Kumaraswamy (@hd_kumaraswamy) May 13, 2021
ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು. ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ. ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.