ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಹಿನ್ನಲೆ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡುವ ಕಾರ್ಯಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಎರಡನೇ ಡೋಸ್ ನೀಡುವುದು ಕಡ್ಡಾಯವಾಗಿರುವ ಹಿನ್ನಲೆ ಎರಡನೇ ಡೋಸ್ ಅವಶ್ಯಕತೆ ಇರುವ ಜನರಿಗೆ ಮಾತ್ರ ಆದ್ಯತೆ ನೀಡಲು ಸರ್ಕಾರ ಸೂಚನೆ ನೀಡಿದೆ.
ವ್ಯಾಕ್ಸಿನ್ ಹಂಚಿಕೆಗೆ ತಡೆ ನೀಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಸಂಬಂಧ ಇಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆ ನೀಗಿಸಲು ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು.

45 ವರ್ಷ ಮೇಲ್ಪಟ್ಟ ನಾಗರಿಕರಿಗೆ, ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿಯ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರವು ಲಸಿಕೆ ಪೂರೈಕೆ ಮಾಡುತ್ತಿದ್ದು, 99.5 ಲಕ್ಷ ಕೋವಿಶೀಲ್ಡ್ ಹಾಗೂ 10.9 ಲಕ್ಷ ಕೋವ್ಯಾಕ್ಸಿನ್ ಲಸಿಕೆ ಸೇರಿ ಒಟ್ಟು ಈ ವರೆಗೆ 1.10 ಕೋಟಿ ಡೋಸ್‍ಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಂಚಿಕೆ ಮಾಡಿದೆ.
ರಾಜ್ಯ ಸರ್ಕಾರವು 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡಲು 3 ಕೋಟಿ ಡೋಸ್ ಲಸಿಕೆಗಳ ಖರೀದಿಗೆ ಆದೇಶ ನೀಡಿದೆ. ಅದರಲ್ಲಿ 2 ಕೋಟಿ ಡೋಸ್ ಕೋವಿಶೀಲ್ಡ್ ಹಾಗೂ 1 ಕೋಟಿ ಡೋಸ್ ಕೊವ್ಯಾಕ್ಸಿನ್ ಒಳಗೊಂಡಿದೆ. ಅಲ್ಲದೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಇಂಜೆಕ್ಷನ್ ಸರಬರಾಜು ಮಾಡಲು ಜಾಗತಿಕ ಟೆಂಡರು ಕರೆಯಲಾಗಿದೆ.
ಕೋವಿಶೀಲ್ಡ್ ಲಸಿಕೆ ಪಡೆದ 14.87 ಲಕ್ಷ ಫಲಾನುಭವಿಗಳು ಆರು ವಾರ ಪೂರೈಸಿದ್ದು, ಎರಡನೇ ಡೋಸ್‍ಗೆ ಅರ್ಹತೆ ಹೊಂದಿದ್ದಾರೆ. ಕೊ-ವ್ಯಾಕ್ಸಿನ್ ಮೊದಲ ಡೋಸ್ ಪಡೆದ 5.10 ಲಕ್ಷ ಫಲಾನುಭವಿಗಳು 4 ವಾರ ಪೂರೈಸಿದ್ದು, ಎರಡನೇ ಡೋಸ್ ಪಡೆಯಲು ಅರ್ಹತೆ ಹೊಂದಿದ್ದಾರೆ. ಅಂದರೆ ಇಂದಿನ ಅಂಕಿ ಅಂಶಗಳ ಪ್ರಕಾರ 19.97 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದಾರೆ.
ಮೊದಲ ಡೋಸ್ ಪಡೆದವರು ಸಂಪೂರ್ಣ ಸುರಕ್ಷತೆ ಹೊಂದಲು ಎರಡನೇ ಡೋಸ್ ಲಸಿಕೆ ನೀಡುವುದು ಅತಿ ಅಗತ್ಯ. ರಾಜ್ಯದಲ್ಲಿ ಸದ್ಯ ಲಸಿಕೆ ಅಭಾವವಿದ್ದು ಆದ್ದರಿಂದ ಲಭ್ಯವಿರುವ ಲಸಿಕೆಯ ದಾಸ್ತಾನನ್ನು ಎರಡನೇ ಡೋಸ್ ಪಡೆಯಲು ಅರ್ಹತೆ ಹೊಂದಿರುವವರಿಗೆ ನೀಡಲು ನಿರ್ಧರಿಸಿದ್ದೇವೆ. ಈ ಕಾರಣಕ್ಕಾಗಿ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ನಾವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ ಎಂದು ಸಿಎಂ ಸ್ಪಷ್ಟನೆ ನೀಡಿದರು.