ಬೆಂಗಳೂರು : ಮುಂದಿನ ಮುಖ್ಯಮಂತ್ರಿ ಕುರಿತು ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಮನವಿ ಮಾಡಿದ್ದಾರೆ.
“ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ” ಎಂದು ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಈ ಮನವಿ ಮಾಡಿದ್ದಾರೆ.
ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಹೀಗಾಗಿ ಮುಂದಿನ ಮುಖ್ಯಮಂತ್ರಿ ಎಂದು ಈಗಲೇ ಹೇಳಿಕೆ ನೀಡಬಾರದು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಬಹಳಷ್ಟು ಶಾಸಕರು ಹೇಳಿಕೆಯನ್ನು ನೀಡಲು ಆರಂಭಿಸಿದ್ದರು. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವಿನ ಕಲಹಕ್ಕೆ ಕಾರಣವಾಗಿತ್ತು.

ಇದೇ ವಿಚಾರವಾಗಿ ರಾಹುಲ್ ಗಾಂಧಿ ಭೇಟಿಯಾಗಿದ್ದ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಬಣದ ವಿರುದ್ಧ ದೂರು ನೀಡಿ ಬಂದಿದ್ದರು. ಹೈಕಮಾಂಡ್ ಸೂಚನೆ ಬೆನ್ನಲೆ ಈಗ ಸಿದ್ದರಾಮಯ್ಯ ಶಾಸಕರಿಗೆ ಮುಂದಿನ ಸಿಎಂ ಆಯ್ಕೆ ಬಗ್ಗೆ ಚರ್ಚೆ ಮಾಡದಂತೆ ಸೂಚನೆ ನೀಡಿದ್ದಾರೆ. ಇದಕ್ಕೂ ಮೊದಲು ಸಿದ್ದರಾಮಯ್ಯ ಶಾಸಕರಿಗೆ ಸೂಚನೆ ನೀಡಲು ನಿರಾಕರಿಸಿದ್ದರು.