ಲಕ್ನೋ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಶನಿವಾರ ಬಿಎಸ್‍ಪಿ ಜೊತೆ ಅಸಾದುದ್ದೀನ್ ಓವೈಸಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಿದ್ದಾರೆ ಅನ್ನೋ ಸುದ್ದಿ ಹರಿದಾಡಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಎಸ್‍ಪಿ ಮುಖ್ಯಸ್ಥೆ, ಮಾಜಿ ಸಿಎಂ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ.
ಬಿಹಾರ ಮತ್ತು ಪಶ್ಚಿಮ ಬಂಗಾಳದ ಬಳಿಕ ಉತ್ತರ ಪ್ರದೇಶ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸ್ ಮುಂದಾಗಿದ್ದಾರೆ. ಹಾಗಾಗಿ ಉತ್ತರ ಪ್ರದೇಶದ ಪ್ರಾದೇಶಿಕ ಪಕ್ಷಗಳ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಸಂಬಂಧ ಉತ್ತರ ಪ್ರದೇಶ ರಾಜಕೀಯದಲ್ಲಿ ಚುನಾವಣಾ ಪೂರ್ವ ಸಮೀಕರಣಗಳು ಲೆಕ್ಕ ನಡೆಯುತ್ತಿದೆ. ಇದೀಗ ಓವೈಸಿ ಜೊತೆಗಿನ ಮೈತ್ರಿ ಸುದ್ದಿಗೆ ಸ್ಪಷ್ಟನೆ ನೀಡಿರುವ ಮಾಯಾವತಿ ಎಲ್ಲ ಊಹಾಪೋಗಳಿಗೆ ತೆರೆ ಎಳೆದಿದ್ದಾರೆ.

ಮಯಾವತಿ ಹೇಳಿದ್ದೇನು:?
ಕಳೆದ ಎರಡು ದಿನಗಳಿಂದ ಎಐಎಂಐಎಂ ಜೊತೆ ಬಿಎಸ್‍ಪಿ ಮೈತ್ರಿ ಮಾಡಿಕೊಳ್ಳಲಿದೆ ಎಂದು ಸುದ್ದಿ ಹರಿದಾಡುತ್ತಿದೆ. ಆದ್ರೆ ಪಂಜಾಬ್ ಹೊರತುಪಡಿಸಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಿಎಸ್‍ಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ.
ಈ ಮೈತ್ರಿ ಸುದ್ದಿಯಲ್ಲಿ ಎಳ್ಳು ಕಾಳಿನಷ್ಟು ಸತ್ಯಾಂಶ ಇಲ್ಲ. ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ ಎಂದು ಹೇಳಿದ್ದಾರೆ.