ಬೆಂಗಳೂರು : ನಾಯಕತ್ವ ಬದಲಾವಣೆಯ ಪರ ವಿರೋಧದ ಚರ್ಚೆಗಳ ನಡುವೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದು, ನಾಳೆ ಮಧ್ಯಾಹ್ನ 2.30ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ಸಿಎಂ ಪ್ರಯಾಣಿಸಲಿದ್ದಾರೆ.
ನಾಳೆ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗುವ ಸಾಧ್ಯತೆಗಳಿದೆ. ಶನಿವಾರ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಬಹುದು ಎನ್ನಲಾಗಿದೆ. ಈಗಾಗಲೇ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದು ಬಂದು ಭೇಟಿ ಮಾಡುವಂತೆ ವರಿಷ್ಠರು ಸೂಚಿಸಿದ್ದಾರಂತೆ.
ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ವಿಸ್ತೃತ ವರದಿಯನ್ನು ಹೈಕಮಾಂಡ್ ನಾಯಕರಿಗೆ ನೀಡಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ವಿವರಿಸಿದ್ದರು. ಇದಾದ ಬಳಿಕ ಬಿಎಸ್‌ವೈ ಮೊದಲ ಬಾರಿ ದೆಹಲಿಗೆ ಭೇಟಿ ನೀಡುತ್ತಿದ್ದು ನಾಯಕತ್ವ ಬದಲಾವಣೆ ಬಗ್ಗೆ ವರಿಷ್ಠರು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿದೆ.
ನವೆಂಬರ್ ಒಳಗೆ ಸಿಎಂ ಬದಲಾವಣೆ ಆಗಬಹುದು ಎನ್ನುವ ಮಾತುಗಳು ಕೇಳಿ ಬಂದಿತು. ಸಚಿವ ಸಿ.ಪಿ ಯೋಗೇಶ್ವರ್, ಮುರುಗೇಶ್ ನಿರಾಣಿ, ಶಾಸಕರಾದ ಅರವಿಂದ್ ಬೆಲ್ಲದ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಈ ಹಿನ್ನಲೆ ನಾಯಕತ್ವ ಬದಲಾವಣೆ ವಿಚಾರದಲ್ಲಿ ಇದು ನಿರ್ಣಾಯಕ ಭೇಟಿ ಎನ್ನಲಾಗಿದ್ದು ಹೈಕಮಾಂಡ್ ಒಲವು ಏನು ಎನ್ನುವುದು ಸ್ಪಷ್ಟವಾಗಲಿದೆ.
ಇನ್ನು ಸಿಎಂ ದೆಹಲಿ ಪ್ರವಾಸದ ವೇಳೆ ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು ರಾಜ್ಯದ ಅಭಿವೃದ್ಧಿ ಕಾರ್ಯಗಳು ಮತ್ತು ವ್ಯಾಕ್ಸಿನ್ ಪೂರೈಕೆ ಬಗ್ಗೆ ಚರ್ಚೆ ಮಾಡಲಿದ್ದಾರೆ.