ಬಳ್ಳಾರಿ: ಇಂದು ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ (VijayaNagara) ಜಿಲ್ಲೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ವಿಜಯನಗರ 6 ತಾಲೂಕುಗಳಿರುವ ಕರ್ನಾಟಕ ರಾಜ್ಯದ 31 ನೇ ಜಿಲ್ಲೆಯಾಗಲಿದೆ.
ವಿಜಯನಗರ ಜಿಲ್ಲಾ ಉತ್ಸವ ಮತ್ತು ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭ ಇಂದು ಸಂಜೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಹಂಪಿಯ ಮಾದರಿಯಲ್ಲಿ ಬೃಹತ್ ವೇದಿಕೆ ಸಿದ್ದಗೊಳಿಸಲಾಗಿದೆ.
ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಜಿಲ್ಲೆಗೆ ಚಾಲನೆ ನೀಡಲಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಲವು ಸಚಿವರು, ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ ವಡಕರಾಯ ದೇವಸ್ಥಾನದಿಂದ ರಥಬೀದಿಯಲ್ಲಿ ವಿಜಯನಗರ ವೈಭವ ಮೆರವಣಿಗೆ ಸಾಗಲಿದೆ. ಇನ್ನೂ ಈ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಲಿವೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ವಿಜಯನಗರ ಜಿಲ್ಲೆ ಉದ್ಘಾಟನೆ ಬಳಿಕ ರಾಜ್ಯ- ಹೊರ ರಾಜ್ಯದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ನೂತನ ವಿಜಯನಗರ ಜಿಲ್ಲೆ ಉದ್ಘಾಟನೆ ಹಿನ್ನೆಲೆ ಹೊಸಪೇಟೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿದ್ಯುತ್ ದೀಪ ಅಲಂಕಾರದಿಂದ ಹೊಸಪೇಟೆ ನಗರ ಕಂಗೊಳಿಸುತ್ತಿದೆ.
ಕಾರ್ಯಕ್ರಮ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ. ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೂ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆ ಕೋವಿಡ್ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.