ಬೆಂಗಳೂರು: Karnataka Budget 2022-23: (ಮಾ.2): ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಮಾರ್ಚ್ 4 ರಿಂದ 30ರವರೆಗೆ ವಿಧಾನಸೌಧ ಹಾಗೂ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇದಾಜ್ಞೆ ಜಾರಿ ಮಾಡಿದ್ದಾರೆ.

ಬಜೆಟ್ ಅಧಿವೇಶನದ ಸಂದರ್ಭ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆಯಂತಹ ಹೋರಾಟಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತದೆ. ಆ ಸಂದರ್ಭದಲ್ಲಿ ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ, ಸಾರ್ವಜನಿಕರಿಗೆ ತೊಂದರೆ, ಸುಗಮ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಅಧಿವೇಶನದ ಕಲಾಪಗಳು ಸುಗಮವಾಗಿ ನಡೆಯಲು ಅನುವಾಗುವಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅಧಿವೇಶನ ನಡೆಯುವ ದಿನ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ನಿಷೇಧಾಜ್ಞೆ ಜಾರಿಯಾಗುವ ಪ್ರದೇಶಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ.
ಇದನ್ನು ಓದಿ: Maha Shivarathri: ಜೈಲಿನಲ್ಲಿ ಶಿವರಾತ್ರಿ ಹಬ್ಬ ಆಚರಿಸಿದ ಸಜಾಬಂಧಿಗಳು